ಮಂಡ್ಯ: ಮದ್ದೂರಿನಲ್ಲಿ ಗಣೇಶ ಮೆರವಣಿಗೆಯ ವೇಳೆ ನಡೆದ ಕಲ್ಲು ತೂರಾಟ ಪ್ರಕರಣ ಜಿಲ್ಲೆಯಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಘಟನೆಗೆ ಸಂಬಂಧಿಸಿ ಪ್ರತಿಭಟನೆ, ಲಾಠಿಚಾರ್ಜ್ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನವಾಗಿದೆ.
ಈ ನಡುವೆ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ನೇರವಾಗಿ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿಗೆ ಕರೆ ಮಾಡಿ – “ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಬೇಕು. ಒತ್ತಡಕ್ಕೆ ಮಣಿಯಬೇಡಿ. ಅಗತ್ಯವಿದ್ದರೆ ನಾನು ಸ್ವತಃ ಮದ್ದೂರಿಗೆ ಬರುತ್ತೇನೆ”ಎಂದು ಖಾರವಾಗಿ ಸೂಚನೆ ನೀಡಿದ್ದಾರೆ.
ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ ಹೆಚ್ಡಿಕೆ, “ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ ಎಂಬ ಮಾಹಿತಿ ಬಂದಿದೆ. ಕಳೆದ ವರ್ಷ ನೆಲಮಂಗಲದಲ್ಲೂ ಇದೇ ರೀತಿಯ ಘಟನೆ ನಡೆದಿತ್ತು. ಈಗ ಮಂಡ್ಯದಲ್ಲೂ ಅಂತಹ ವಾತಾವರಣ ಸೃಷ್ಟಿಯಾಗಿದೆ. ಕುವೆಂಪು ಅವರ ಶಾಂತಿಯ ತೋಟಕ್ಕೆ ಬೆಂಕಿ ಹಚ್ಚುವ ಕೆಲಸ ನಡೆಯುತ್ತಿದೆ. ಇದರ ಹಿಂದೆ ಕಾಂಗ್ರೆಸ್ ಪಕ್ಷದ ನಡವಳಿಕೆ ಮತ್ತು ಆಡಳಿತವೇ ಕಾರಣ ಎಂದು ವಾಗ್ದಾಳಿ ನಡೆಸಿದರು.
ಅವರು ಮುಂದುವರಿದು – “ಹಿಂದೆ ಒಂದೆರಡು ಜಿಲ್ಲೆಗಳಲ್ಲಿ ಮಾತ್ರ ಸೀಮಿತವಾಗಿದ್ದ ಸಂಘರ್ಷ, ಈಗ ಇಡೀ ರಾಜ್ಯಕ್ಕೆ ವ್ಯಾಪಿಸಿದೆ. ಕಾಂಗ್ರೆಸ್ ಪಕ್ಷದ ಅವನತಿ ಆರಂಭವಾಗಿದೆ. ಇದನ್ನು ಅವರು ಅರಿಯದಿದ್ದರೆ ಅದು ಸ್ವಯಂ ನಾಶ ಆಗಲಿದೆ ಎಂದು ಟೀಕಿಸಿದರು.
ಇದೇ ವೇಳೆ, ಇಂದು ಬೆಳಿಗ್ಗೆಯೂ ಮದ್ದೂರಿನ ರಾಮ್ ರಹೀಮ್ ನಗರದಲ್ಲಿ ಮತ್ತೆ ಕಲ್ಲು ತೂರಾಟ ನಡೆದಿದೆ. ಪೊಲೀಸರು ಲಾಠಿ ಚಾರ್ಜ್ ನಡೆಸಿ ಗುಂಪನ್ನು ಚದುರಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಎಫ್‌ಐಆರ್ ದಾಖಲಾಗಿದ್ದು, 21 ಆರೋಪಿಗಳನ್ನು ವಶಕ್ಕೆ ಪಡೆದಿರುವುದಾಗಿ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.
For More Updates Join our WhatsApp Group :