ನಿವೇಶನ ಹಿಂತಿರುಗಿಸುವ ನಿರ್ಧಾರ ನನಗೂ ಅಚ್ಚರಿ ಉಂಟು ಮಾಡಿದೆ : ಸಿದ್ದರಾಮಯ್ಯ

ಕಾಂಗ್ರೆಸ್ ತಂದ ಫುಡ್ ಸೆಕ್ಯೂರಿಟಿ ಆಕ್ಟ್ ಅನ್ನೇ ವಿರೋಧಿಸಿದ್ದು ಆ ಮಹಾನುಭಾವ - ಸಿದ್ದರಾಮಯ್ಯ

ಬೆಂಗಳೂರು: ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರದಿಂದ ನೊಂದಿರುವ ನನ್ನ ಪತ್ನಿ ಈ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡು, ನನಗೂ ಆಶ್ಚರ್ಯ ಉಂಟು ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಎಕ್ಸ್ ಪೋಸ್ಟ್ ಮೂಲಕ ತಿಳಿಸಿದ್ದಾರೆ.

14 ಪರ್ಯಾಯ ನಿವೇಶನ ಹಿಂದಿರುಗಿಸಿ ಮುಡಾಗೆ ಪತ್ನಿ ಬರೆದ ಪತ್ರದ ಬೆನ್ನಲ್ಲೇ ಎಕ್ಸ್ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೇ ವಶಕ್ಕೆ ಪಡೆದಿದ್ದ ಜಮೀನಿಗೆ ಪರಿಹಾರ ರೂಪದಲ್ಲಿ ನಿವೇಶನಗಳನ್ನು ನನ್ನ ಪತ್ನ ಪಾರ್ವತಿ ಹಿಂದಿರುಗಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ನನ್ನ ವಿರುದ್ಧ ರಾಜಕೀಯ ದ್ವೇಷ ಸಾಧನೆಗಾಗಿ ವಿರೋಧ ಪಕ್ಷಗಳು ಸುಳ್ಳು ದೂರನ್ನು ಸೃಷ್ಟಿಸಿ ನನ್ನ ಕುಟುಂಬವನ್ನು ವಿವಾದಕ್ಕೆ ಎಳೆದು ತಂದಿರುವುದು ರಾಜ್ಯದ ಜನತೆಗೂ ತಿಳಿದಿದೆ. ಈ ಅನ್ಯಾಯಕ್ಕೆ ತಲೆಬಾಗದೇ ಹೋರಾಟ ಮಾಡಬೇಕೆಂಬುದು ನನ್ನ ನಿಲುವಾಗಿತ್ತು ಎಂದಿದ್ದಾರೆ. ಆದರೆ ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರದಿಂದ ನೊಂದಿರುವ ನನ್ನ ಪತ್ನಿ ಈ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡು, ನನಗೂ ಆಶ್ಚರ್ಯ ಉಂಟು ಮಾಡಿದ್ದಾರೆ. ನನ್ನ ನಾಲ್ಕು ದಶಕಗಳ ಸುದೀರ್ಘ ರಾಜಕಾರಣದಲ್ಲಿ ಎಂದೂ ಕೂಡಾ ಮಧ್ಯಪ್ರವೇಶಿಸದೇ ಕುಟುಂಬಕ್ಕಷ್ಟೇ ಸೀಮಿತವಾಗಿದ್ದ ನನ್ನ ಪತ್ನಿ, ನನ್ನ ವಿರುದ್ಧದ ದ್ವೇಷದ ರಾಜಕಾರಣಕ್ಕೆ ಬಲಿಯಾಗಿ ಮಾನಸಿಕವಾಗಿ ಹಿಂಸೆ ಅನುಭವಿಸುವಂತಾಗಿರುವುದಕ್ಕೆ ನನಗೆ ವಿಷಾದ ಇದೆ. ಹೀಗಿದ್ದರೂ ನಿವೇಶನಗಳನ್ನು ಹಿಂದಿರುಗಿಸಿದ ನನ್ನ ಪತ್ನಿಯ ನಿರ್ಧಾರವನ್ನು ನಾನು ಗೌರವಿಸುತ್ತೇನೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಮುಡಾ ಪ್ರಕರಣ ತೀವ್ರ ಸಂಚಲನ ಮೂಡಿಸಿದ ಬೆನ್ನಲ್ಲೇ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ಮೌನ ಮುರಿದು, ಸೋಮವಾರ ಪತ್ರ ಬರೆದಿದ್ದಾರೆ. ಜೊತೆಗೆ ವಿವಾದಕ್ಕೆ ಕಾರಣವಾಗಿರುವ 14 ಬದಲಿ ನಿವೇಶನವನ್ನು ಮುಡಾಗೆ ಮರಳಿಸಲು ನಿರ್ಧಾರ ಪ್ರಕಟಿಸಿದ್ದಾರೆ.

ಮೈಸೂರಿನ ಕೆಸರೆ ಗ್ರಾಮದ ಸರ್ವೇ ನಂ 464 ರಲ್ಲಿ 3 ಎಕರೆ 16 ಗುಂಟೆ ಜಮೀನನ್ನು ಪ್ರಾಧಿಕಾರವು ಭೂಸ್ವಾಧೀನವಿಲ್ಲದೇ ಉಪಯೋಗಿಸಿಕೊಂಡಿದ್ದಕ್ಕಾಗಿ ಪರಿಹಾರದ ಬದಲಾಗಿ ವಿಜಯನಗರ 3 ಮತ್ತು 4 ನೇ ಹಂತದಲ್ಲಿ ನನಗೆ ಮಂಜೂರು ಮಾಡಲಾದ 14 ನಿವೇಶನಗಳನ್ನು ಹಿಂದಿರುಗಿಸುವುದಾಗಿ ಮುಡಾ ಆಯುಕ್ತರಿಗೆ ಸಿಎಂ ಪತ್ನಿ ಪಾರ್ವತಮ್ಮ ಪತ್ರದ ಮೂಲಕ ತಿಳಿಸಿದ್ದಾರೆ.

Leave a Reply

Your email address will not be published. Required fields are marked *