ನವದೆಹಲಿ: ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡುವ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಕುರಿತು ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಇಂದು ಸ್ವತಂತ್ರ ವಿಶೇಷ ತನಿಖಾ ತಂಡ ರಚಿಸಿ ಆದೇಶಿಸಿದೆ.
ಸ್ವತಂತ್ರ ತನಿಖೆಗೆಗ ಆದೇಶಿಸಿರುವ ಪೀಠ, ಎಫ್ಎಸ್ಎಸ್ಎಐನ ಓರ್ವ ಅಧಿಕಾರಿ, ಸಿಬಿಐ ಮತ್ತು ಆಂಧ್ರಪ್ರದೇಶ ಪೊಲೀಸರ ತಲಾ ಇಬ್ಬರು ಅಧಿಕಾರಿಗಳನ್ನು ಒಳಗೊಂಡಿರುವ ಹೊಸ ಐದು ಸದಸ್ಯರ ಸತ್ತಂತ್ರ ವಿಶೇಷ ತನಿಖಾ ತಂಡವನ್ನು ರಚಿಸಲು ಸೂಚನೆ ನೀಡಿದೆ. ಎಸ್ಐಟಿ ತನಿಖೆಯನ್ನು ಸಿಬಿಐ ನಿರ್ದೇಶಕರು ಮೇಲ್ವಿಚಾರಣೆ ಮಾಡುತ್ತಾರೆ ಎಂದು ಪೀಠ ಹೇಳಿದೆ.
ಪ್ರಕರಣ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್. ಗಾವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರಿದ್ದ ದ್ವಿಸದಸ್ಯ ಪೀಠ, ಲಡ್ಡು ವಿಚಾರ ಕೋಟ್ಯಂತರ ಭಕ್ತರ ನಂಬಿಕೆಗೆ ಸಂಬಂಧಿಸಿದ ವಿಚಾರ ಎಂದು ಅಭಿಪ್ರಾಯಪಟ್ಟ ಸುಪ್ರೀಂ ಕೋರ್ಟ್, ನ್ಯಾಯಾಲಯಗಳನ್ನು ರಾಜಕೀಯ ಯುದ್ಧಭೂಮಿಯಾಗಿ ಬಳಸಿಕೊಳ್ಳಲು ನಾವು ಅನುಮತಿ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಈಗಾಗಲೇ ರಾಜ್ಯ ಸರ್ಕಾರ ರಚಿಸಿರುವ ಎಸ್ಐಟಿ ತಂಡದ ಬಗ್ಗೆ ಯಾವುದೇ ಅನುಮಾನವಿಲ್ಲ. ಆದರೆ ಈ ವಿಷಯ ಕೋಟ್ಯಂತರ ಭಕ್ತರ ಭಾವನೆಗೆ ಸಂಬಂಧಿಸಿರುವ ಕಾರಣ ಸಿಬಿಐ ನಿರ್ದೇಶಕರ ಮೇಲ್ವಿಚಾರಣೆಯಲ್ಲಿ ಸ್ವತಂತ್ರ ತನಿಖಾ ತಂಡ ತನಿಖೆ ನಡೆಸುವುದು ಸೂಕ್ತ ಎಂದು ಪೀಠ ಹೇಳಿದೆ.