ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನು ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ನಗರದ 57ನೇ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ನಡೆಯಲಿದೆ. ಈ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ 100 ದಿನಗಳ ಬಳಿಕ ಮತ್ತು ಚಾರ್ಜ್ಶೀಟ್ ಸಲ್ಲಿಕೆಯಾದ ಎರಡು ವಾರಗಳ ಬಳಿಕ ದರ್ಶನ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ನ್ಯಾಯಾಧೀಶ ಜೈಶಂಕರ್ ಅವರು ಸೆ.21ರಂದು ಜಾಮೀನು ಅರ್ಜಿಯ ವಿಚಾರಣೆ ನಡೆಸಿ, ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಿ ವಿಶೇಷ ಅಭಿಯೋಜಕರಿಗೆ ನೋಟಿಸ್ ನೀಡಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದ್ದರು.
ದರ್ಶನ್ ಜೈಲುವಾಸ ಹೇಗಿತ್ತು ಗೊತ್ತಾ..? : ದರ್ಶನ್ ಜೂ. 11ರಂದು ಬಂಧನವಾಗಿದ್ದು, ಈಗಾಗಲೇ 100 ದಿನಗಳ ಜೈಲು ವಾಸ ಅನುಭವಿಸಿದ್ದಾರೆ. ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಎರಡು ವಾರಗಳ ಹಿಂದೆ 3,991 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಇದಾದ ನಂತರ ಜಾಮೀನು ಕೋರಿ ದರ್ಶನ್ ಅರ್ಜಿ ಸಲ್ಲಿಸಿರಲಿಲ್ಲ. ವಕೀಲರೊಂದಿಗೆ ಚರ್ಚಿಸಿ, ಚಾರ್ಜ್ಶೀಟ್ ಸಲ್ಲಿಕೆಯಾದ ಎರಡು ವಾರಗಳ ಬಳಿಕ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.
ಪ್ರಕರಣದ ಇತರೆ ಆರೋಪಿಗಳಾದ ಪವಿತ್ರಾ ಗೌಡ(ಎ1) ಸೇರಿ ಕೆಲವು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ಈಗಾಗಲೇ ವಜಾಗೊಂಡಿದೆ. ಸೆ.30ರವರೆಗೆ ಇವರಿಗೆ ನ್ಯಾಯಾಂಗ ಬಂಧನವಿರಲಿದೆ. ದರ್ಶನ್ ಮೊದಲು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಇಲ್ಲಿ ವಿಶೇಷ ಸೌಲಭ್ಯ ನೀಡಿದ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಆರೋಪಿಯನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಇದೀಗ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ದರ್ಶನ್ ಇದ್ದಾರೆ. ಪವಿತ್ರಾ ಗೌಡ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರೆ, ಉಳಿದವರನ್ನು ರಾಜ್ಯದ ವಿವಿಧ ಜೈಲುಗಳಿಗೆ ಶಿಫ್ಟ್ ಮಾಡಲಾಗಿದೆ.