ತುಮಕೂರು: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದರು.

ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯವರ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಅವರು, ಮೊದಲಿಗೆ ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ಭೇಟಿ ನೀಡಿ ದರ್ಶನ ಪಡೆದರು.
ಸಮಾರಂಭದ ಉದ್ಘಾಟನೆ ಹಾಗೂ ಸಿದ್ಧಗಂಗಾ ವೈದ್ಯಕೀಯ ವಿದ್ಯಾರ್ಥಿನಿಲಯದ ಕಟ್ಟಡದ ಉದ್ಘಾಟನೆಯನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೆರವೇರಿಸಿದ್ದು. ದಿವ್ಯ ನೇತೃತ್ವವನ್ನು ಸಿದ್ಧಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮಿಗಳು ವಹಿಸಲಿದ್ದು, ಮೈಸೂರು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸುವರು. ಸಿದ್ಧಗಂಗಾ ಮಠದ ಕಿರಿಯ ಶ್ರೀಗಳಾದ ಶ್ರೀ ಸಿದ್ದೇಶ್ವರ ಸ್ವಾಮಿಗಳು ಉಪಸ್ಥಿತರಿರುವರು. ಮುಖ್ಯ ಅತಿಥಿಗಳಾಗಿ ಕೇಂದ್ರದ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಹಕಾರ ಸಚಿವ ಕೆ.ಎನ್.ರಾಜಣ್ಣ ಭಾಗವಹಿಸುವರು. ವಿಶೇಷ ಆಹ್ವಾನಿತರಾಗಿ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಬಿ.ಸುರೇಶ್‌ಗೌಡ, ಎನ್.ಶ್ರೀನಿವಾಸ್ ಪಾಲ್ಗೊಳ್ಳುವರು.
ಗುರುವಂದನಾ ಮಹೋತ್ಸವದ ಅಂಗವಾಗಿ ಮಠದಲ್ಲಿ 8 ಕಡೆ ಬೆಳಿಗ್ಗೆಯಿಂದ ರಾತ್ರಿಯವರೆಗೆ ದಾಸೋಹ ನಿರಂತರವಾಗಿ ಏರ್ಪಡಿಸಿದ್ದು, ಸುಮಾರು ಲಕ್ಷಕ್ಕೂ ಅಧಿಕ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಬೆಳಗಿನ ಉಪಾಹಾರವಾಗಿ ಉಪ್ಪಿಟ್ಟು ಕೇಸರಿಬಾತು ವಿತರಿಸಲಿದ್ದು, ಮಧ್ಯಾಹ್ನದಿಂದ ರಾತ್ರಿಯವರೆಗೆ ವಿಶೇಷ ದಾಸೋಹದ ವ್ಯವಸ್ಥೆ ಇದೆ. ಬೂಂದಿ ಪಾಯಸ, ಹೆಸರುಬೇಳೆ, ತರಕಾರಿ ಕೂಟು, ಚಿತ್ರಾನ್ನ , ಅನ್ನಸಾಂಬಾರ್ ಮಜ್ಜಿಗೆಯೊಳಗೊಂಡ ದಾಸೋಹವನ್ನು ಎಲ್ಲಾ ಭಕ್ತರಿಗೂ ವಿತರಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಮಠದ ಆಡಳಿತ ಮಂಡಳಿಯವರು ತಿಳಿಸಿದ್ದಾರೆ.