ಬೆಂಗಳೂರು: ಸಚಿವ ಪ್ರಹ್ಲಾದ್ ಜೋಶಿ ಸಹೋದರನ ವಿರುದ್ಧದ 2 ಕೋಟಿ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ಭವನದ ಮುಂದೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದಲ್ಲದೇ, ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಗೋಪಾಲ್ ಜೋಶಿ ಬಂಧಿಸಬೇಕೆಂದು ಪ್ರತಿಭಟಿಸಿದರು.
ಪ್ರತಿಭಟನೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್, ಹೇಮರಾಜು, ಪುಟ್ಟರಾಜು, ಕಶಾಲ್ ಅರವೇಗೌಡ, ನವೀನ್ ಸಾಯಿ, ವಾಸುದೇವ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.
ಪ್ರತಿಭಟನೆ ಬಳಿಕ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್, “ಬಿಜೆಪಿ ಕೇಂದ್ರ ಸರ್ಕಾರದ ಸಚಿವ ಸಂಪುಟದಲ್ಲಿ ಅರ್ಧದಷ್ಟು ಸಚಿವರು ಭ್ರಷ್ಟಚಾರ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದಂತೆ ನಾ ಖಾವುಂಗ, ನಾ ಖಾನೇ ದುಂಗಾ ಮಾತು ಎಲ್ಲಿ ಹೋಯಿತು. ಕೇಂದ್ರ ಬಿಜೆಪಿ ಸರ್ಕಾರ ಭ್ರಷ್ಟಚಾರದ ಮಹಾ ಸಾಗರವಾಗಿದೆ. ಜಾರಿ ನಿರ್ದೇಶನಾಲಯ ಮತ್ತು ಆದಾಯ ತೆರಿಗೆ ಇಲಾಖೆ ದುರ್ಬಳಕೆ ಮಾಡಿಕೊಂಡು ಸರ್ವಾಧಿಕಾರ ಮೆರೆಯುತ್ತಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಪ್ರಕರಣದಲ್ಲಿ ನೈತಿಕ ಹೊಣೆ ಹೊತ್ತು ಪ್ರಧಾನಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಗೋಪಾಲ್ ಜೋಶಿ ವಿರುದ್ಧ ಪ್ರಕರಣದ ತನಿಖೆ ನಡೆಸಲಾಗುತ್ತಿದೆ – ಕಮಿಷನರ್ ಬಿ. ದಯಾನಂದ್: ಲೋಕಸಭಾ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ವಂಚಿಸಿರುವ ಆರೋಪದಡಿ ಬಸವೇಶ್ವರ ನಗರ ಠಾಣೆಯಲ್ಲಿ ವಂಚನೆ ಹಾಗೂ ಜಾತಿನಿಂದನೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ತಿಳಿಸಿದ್ದಾರೆ. ಹಂತಹಂತವಾಗಿ ಸುಮಾರು 2 ಕೋಟಿಯಷ್ಟು ಹಣ ಪಡೆದು ವಂಚಿಸಲಾಗಿದೆ ಎಂದು ದೂರು ನೀಡಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದರು.