ಅಂಗನವಾಡಿ ಕಾರ್ಯಕರ್ತೆಯರಿಗೆ ಕೇಂದ್ರ ಸಚಿವ ಸೋಮಣ್ಣ ಗುಡ್ನ್ಯೂಸ್

ಅಂಗನವಾಡಿ ಕಾರ್ಯಕರ್ತೆಯರಿಗೆ ಕೇಂದ್ರ ಸಚಿವ ಸೋಮಣ್ಣ ಗುಡ್ನ್ಯೂಸ್

ರಾಜ್ಯಾದ್ಯಂತ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಲವು ವರ್ಷಗಳಿಂದ ಸರ್ಕಾರಗಳ ಮುಂದೆ ತಮ್ಮ ಬೇಡಿಕೆ ಇಡುತ್ತಾ ಬಂದಿದ್ದರು. ಇದಕ್ಕಾಗಿ ರಾಜ್ಯದಲ್ಲಿ ಹಲವು ಬಾರಿ ಬೀದಿಗಿಳಿದು ಪ್ರತಿಭಟನೆಯೂ ಮಾಡಿದ್ದರು. ಆದರೂ ಅವರ ಬೇಡಿಕೆಗಳು ಈಡೇರಿರಲಿಲ್ಲ. ಇದೀಗ ಕೇಂದ್ರ ಸಚಿವರೂ ಆದ ವಿ.ಸೋಮಣ್ಣ ಅವರು ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರ ಹಲವು ವರ್ಷಗಳ ಬೇಡಿಕೆಯಾದ ಗ್ರಾಚ್ಯುಟಿ ಬಗ್ಗೆ ಸಚಿವ ವಿ.ಸೋಮಣ್ಣ ಮಹತ್ವದ ಮಾಹಿತಿ ನೀಡಿದ್ದು, ಕಾರ್ಯಕರ್ತೆಯರಿಗೆ ಗ್ರ್ಯಾಚುಯಿಟಿ ಸೇರಿದಂತೆ ಇರುವ ಹಲವು ಬೇಡಿಕೆಗಳ ಈಡೇರಿಕೆ ಬಗ್ಗೆ ಚರ್ಚಿಸಲು ಕೇಂದ್ರ ಸರ್ಕಾರದ ಬಳಿಗೆ ನಿಯೋಗವನ್ನು ಕರೆದೊಯ್ಯುವುದಾಗಿ ನಿನ್ನೆ ಭರವಸೆ ನೀಡಿದ್ದಾರೆ.

ನಿನ್ನೆ ಬೆಂಗಳೂರಿನ ಶಿಕ್ಷಕರ ಸದನದಲ್ಲಿ ಆಯೋಜಿಸಿದ್ದ ಪೌಷ್ಟಿಕತೆ ಮತ್ತು ಪೂರ್ವ ಪ್ರಾಥಮಿಕ ಶಿಕ್ಷಣದ ಹಕ್ಕಿನೆಡೆಗೆ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಸಚಿವ ಸೋಮಣ್ಣ ಮಾತನಾಡಿದರು. ಹಿಂದಿನ ವರ್ಷಗಳಲ್ಲಿ ಎದುರಾಗಿದ್ದ ಕೋವಿಡ್ನಂತಹ ಭೀಕರ ಪರಿಸ್ಥಿತಿಯಲ್ಲಿ ಜನ ಹೊರಗೆ ಬರಲು ಹಿಂದೇಟು ಹಾಕುತ್ತಿದ್ದರು. ಈ ಸಮಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಶ್ಲಾಘನೀಯ ಎಂದರು.

ಜನ ಭಯ ಪಡುವ ಸಮಯದಲ್ಲೂ ಆರೋಗ್ಯ ಇಲಾಖೆ ಜೊತೆಗೂಡಿ ಅಂಗನವಾಡಿ ಕಾರ್ಯಕರ್ತೆಯರು ಮಾಡಿದ ಸೇವೆಯನ್ನು ಕಣ್ಣಾರೆ ಕಂಡಿದ್ದೇನೆ. ಆದರೆ, ಕಾರ್ಯಕರ್ತೆಯರು ತಮ್ಮ ಶ್ರಮಕ್ಕೆ ತಕ್ಕ ಸ್ಥಾನಮಾನಗಳನ್ನು ಪಡೆದುಕೊಂಡಿಲ್ಲ. ನೀವು ನ್ಯಾಯಯುತವಾಗಿ ಮುಂದಿಟ್ಟಿರುವ ಬೇಡಿಕೆಗಳನ್ನು ಪರಿಗಣಿಸುತ್ತೇವೆ ಎಂದು ಭರವಸೆ ನೀಡಿದರು.

ಅಂಗನವಾಡಿ ಕಾರ್ಯಕರ್ತೆಯರಿಗೆ 26,000 ರೂಪಾಯಿ ಕನಿಷ್ಠ ವೇತನ ನಿಗದಿ ಮಾಡಬೇಕು. ಸುಪ್ರೀಂಕೋರ್ಟ್ ತೀರ್ಪಿನಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ಯಾಚ್ಯುಟಿ ನೀಡಬೇಕು. ಸಮಗ್ರ ಶಿಶು ಅಭಿವೃದ್ಧಿ ಯೋಜನೆಯನ್ನು ಕಾಯ್ದೆಯಾಗಿ ಮಾಡಬೇಕು. ರಾಜ್ಯದಲ್ಲಿ ಪೌಷ್ಟಿಕ ಆಹಾರ ಹಾಗೂ ಪೂರ್ವ ಪ್ರಾಥಮಿಕ ಶಿಕ್ಷಣವನ್ನು (ಅಂಗನವಾಡಿ) ಹಕ್ಕು ಎಂದು ಪರಿಗಣಿಸಬೇಕು ಎಂದು ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.

ಸಮಗ್ರ ಶಿಶು ಅಭಿವೃದ್ಧಿ ಯೋಜನೆಗೆ (ಐಸಿಡಿಎಸ್) ನೀಡುವ ಬಜೆಟ್ ಅನ್ನು ಹೆಚ್ಚು ಮಾಡಬೇಕು. ಅಂಗನವಾಡಿ ಕೇಂದ್ರಗಳಿಗೆ ವಿತರಿಸುವ ಪೌಷ್ಟಿಕ ಆಹಾರಕ್ಕೆ ಜಿಎಸ್ಟಿ ವಿಧಿಸಬಾರದು. ಅಂಗನವಾಡಿ ಕಾರ್ಯಕರ್ತೆಯರನ್ನು ಚುನಾವಣಾ ಕರ್ತವ್ಯಗಳಿಗೆ ಬಳಸಿಕೊಳ್ಳಬಾರದು ಎಂದು ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆಯು ಕೇಂದ್ರ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಪತ್ರ ಸಲ್ಲಿಸಿತು. ಮನವಿ ಸ್ವೀಕರಿಸಿದ ಸಚಿವ ಸೋಮಣ್ಣ, ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದ್ದರು.

ಇದೇ ವರ್ಷದ ಆರಂಭದಲ್ಲಿ ಅಂಗನವಾಡಿ ನೌಕರರ ಸಂಘವು ರಾಜ್ಯ ಸರ್ಕಾರಕ್ಕೂ ತಮ್ಮ ಮನವಿಗಳನ್ನು ಮುಂದಿಟ್ಟಿತ್ತು. ಅಂಗನವಾಡಿ ಕಾರ್ಯಕರ್ತೆಯರ ನಿಯೋಗ ಕೂಡ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ಮನವಿ ಸಲ್ಲಿಸಿತ್ತು. ಮನವಿ ಸ್ವೀಕರಿಸಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸುವುದಾಗಿ ಭರವಸೆ ನೀಡಿದ್ದರು. ಇದೀಗ ಅಂಗನವಾಡಿ ಕಾರ್ಯಕರ್ತೆಯರು ಕೇಂದ್ರ ಸರ್ಕಾರದ ಬಾಗಿಲು ಬಡಿದಿದ್ದಾರೆ. ಕೇಂದ್ರದಿಂದ ಬೇಡಿಕೆಗಳು ಈಡೇರುವ ನಿರೀಕ್ಷೆಯಲ್ಲಿದ್ದಾರೆ.

Leave a Reply

Your email address will not be published. Required fields are marked *