ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣಕ್ಕೆ (Valmiki Corporation Corruption Case) ಸಂಬಂಧಿಸಿದಂತೆ ಕಾಂಗ್ರೆಸ್ ಮಾಜಿ ಸಚಿವ ಬಿ.ಎನ್ ನಾಗೇಂದ್ರ (BN Nagendra) ಅವರನ್ನ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಬುಧವಾರ (ಇಂದು) ಬೆಳ್ಳಂಬೆಳಗ್ಗೆ ಡಾಲರ್ಸ್ ಕಾಲೋನಿಯಲ್ಲಿರುವ ನಾಗೇಂದ್ರ ನಿವಾಸ ಸೇರಿದಂತೆ ವಿವಿಧೆಡೆ ದಾಳಿ ನಡೆಸಿದ್ದ ಅಧಿಕಾರಿಗಳು ಮಾಜಿ ಸಚಿವರನ್ನ ವಶಕ್ಕೆ ಪಡೆದಿದ್ದಾರೆ. ನಾಗೇಂದ್ರ ಅವರ ಮೊಬೈಲ್ ಫೋನ್ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸುಮಾರು 2 ಗಂಟೆಯಿಂದ ವಿಚಾರಣೆ ನಡೆಸುತ್ತಿದ್ದು, ಮಹತ್ವದ ದಾಖಲೆಗಳನ್ನು ಕಲೆಹಾಕುತ್ತಿದ್ದಾರೆ ಎಂದು ಇಡಿ ಮೂಲಗಳು ತಿಳಿಸಿವೆ
ಬಹುಕೋಟಿ ಹಗರಣ ಕೇಸ್‌ಗೆ ಸಂಬಂಧಿಸಿದಂತೆ ಬುಧವಾರ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೋಟಿಸ್ ನೀಡಿದ ಮರುದಿನವೇ ಈ ಮಹತ್ವದ ಬೆಳವಣಿಗೆ ನಡೆದಿದೆ. ಈಗಾಗಲೇ ಶಾಸಕ ಬಸನಗೌಡ ದದ್ದಲ್, ಯ್ಯೂನಿಯನ್ ಬ್ಯಾಂಕ್ ಬ್ರಾಂಚ್ ಹೆಡ್ ಸುಚಿ ಸ್ಮಿತಾ, ಕ್ರೆಡಿಟ್ ಆಫೀಸರ್ ಕೃಷ್ಣಮೂರ್ತಿ, ಬ್ರಾಂಚ್ ಹೆಡ್ ದೀಪಾ ಮುಂತಾದವರ ಮನೆಗಳ ಮೇಲೂ ದಾಳಿ ನಡೆಸಿ, ವಿಚಾರಣೆ ನಡೆಸಲಾಗುತ್ತಿದೆ. ಈ ಮಧ್ಯ ಮಾಜಿ ಸಚಿವ ನಾಗೇಂದ್ರ ಅವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ
ಬುಧವಾರ ಬೆಳ್ಳಂಬೆಳಗ್ಗೆ ಇಬ್ಬರೂ ನಾಯಕರ ಮನೆಗಳ ಮೇಲೆ ಇಡಿ ತಂಡ ದಾಳಿ ಮಾಡಿ ಪರಿಶೀಲನೆ ನಡೆಸಿದೆ. ನಿಗಮದ ಎಂಡಿ ಜೆ.ಜೆ.ಪದ್ಮನಾಭ್, ಲೆಕ್ಕಪರಿಶೋಧಕ ಪರಶುರಾಮ್ ಮನೆ ಮೇಲೂ ದಾಳಿ ನಡೆಸಲಾಗಿದೆ. ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜ್, ಸತ್ಯನಾರಾಯಣ್ ವರ್ಮಾ ಸೇರಿ ಹಲವರ ಮನೆ, ಕಚೇರಿಯಲ್ಲೂ ಪರಿಶೀಲನೆ ನಡೆಸಲಾಗುತ್ತಿದೆ.
ಪದ್ಮನಾಭ್ ನಿವಾಸ, ಹೈದರಾಬಾದ್‌ನಲ್ಲಿರುವ ಸತ್ಯನಾರಾಯಣ್ ವರ್ಮಾ ನಿವಾಸ ಕಚೇರಿ ಸೇರಿದಂತೆ ಒಟ್ಟು 18 ಸ್ಥಳಗಳಲ್ಲಿ ಏಕಕಾಲಕ್ಕೆ ಇಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ ಹಾಗೂ ದದ್ದಲ್ ಇಬ್ಬರೂ ಎಸ್‌ಐಟಿ ಮುಂದೆ ಹಾಜರಾಗಿ ವಿಚಾರಣೆ ಎದುರಿಸಿದ್ದರು. ಬುಧವಾರವೂ ಸಹ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು