‘ಆಸರೆ’ಯಾದ ಖಾಕಿ ಪಡೆ: ಮನೆಬಾಗಿಲಿಗೆ ತೆರಳಿ ವೃದ್ಧರು, ವಿಧವೆಯರಿಗೆ ನೆರವಾದ ಪೊಲೀಸರು
ವಿಜಯಪುರ: ವಿಜಯಪುರ ಜಿಲ್ಲಾ ಪೊಲೀಸರು ಸಮಾಜಮುಖಿ ಕಾರ್ಯದ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸರ್ಕಾರಿ ಸೌಲಭ್ಯಗಳಿಂದ ವಂಚಿತರಾಗಿದ್ದ ವೃದ್ಧರು ಮತ್ತು ಒಂಟಿ ಮಹಿಳೆಯರಿಗೆ ನೆರವಾಗುವ ಮೂಲಕ ಪೊಲೀಸರು ಮಾನವೀಯತೆ ಮೆರೆದಿದ್ದಾರೆ.
ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಪೊಲೀಸ್ ಸಿಬ್ಬಂದಿ, 73 ಜನ ವೃದ್ಧರು ಹಾಗೂ ಏಕಾಂಗಿಯಾಗಿ ಜೀವನ ಸಾಗಿಸುತ್ತಿದ್ದ ಮಹಿಳೆಯರನ್ನು ಗುರುತಿಸಿ ಅವರಿಗೆ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ ದೊರಕಿಸಿಕೊಡುವ ಕಾರ್ಯ ಮಾಡಿದ್ದಾರೆ. ವೃದ್ಧಾಪ್ಯ ವೇತನ, ವಿಧವಾ ವೇತನ, ವಿಕಲಚೇತನ ಪಿಂಚಣಿ, ಇಂದಿರಾ ಪಿಂಚಣಿ, ಸಂಧ್ಯಾ ಸುರಕ್ಷಾ ಮತ್ತು ಭಾಗ್ಯ ಜ್ಯೋತಿ ಯೋಜನೆಗಳ ಲಾಭ ಪಡೆಯಲು ಅಗತ್ಯ ದಾಖಲೆಗಳು ಮತ್ತು ಪ್ರಕ್ರಿಯೆಗಳಲ್ಲಿ ಸಹಾಯ ಮಾಡಿದ್ದಾರೆ.

ಈ ವಿಶೇಷ ಕಾರ್ಯಾಚರಣೆಯಿಂದ 14 ಮಂದಿಗೆ ವೃದ್ಧಾಪ್ಯ ವೇತನ, 16 ಮಹಿಳೆಯರಿಗೆ ವಿಧವಾ ವೇತನ ಹಾಗೂ 8 ಮಂದಿಗೆ ವಿಕಲಚೇತನ ಪಿಂಚಣಿ ಮಂಜೂರಾಗಿದೆ. ಜೊತೆಗೆ 10 ವೃದ್ಧರಿಗೆ ಹಿರಿಯ ನಾಗರಿಕರ ಗುರುತಿನ ಚೀಟಿ ದೊರಕಿಸಿಕೊಡಲಾಗಿದೆ.
ಇದರೊಂದಿಗೆ 3 ವೃದ್ಧೆಯರಿಗೆ ಉಚಿತ ಕಣ್ಣಿನ ಚಿಕಿತ್ಸೆ ವ್ಯವಸ್ಥೆ ಮಾಡಲಾಗಿದ್ದು, 4 ಮಂದಿಗೆ ಅಂಚೆ ಬ್ಯಾಂಕ್ ಖಾತೆ ತೆರೆಯಲು ಸಹಾಯ ಮಾಡಲಾಗಿದೆ. ಈ ಸಮಾಜಮುಖಿ ಕಾರ್ಯವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ Lakshman Nimbargi ಅವರ ಮಾರ್ಗದರ್ಶನದಲ್ಲಿ ನಡೆಸಲಾಗಿದೆ.
ಪೊಲೀಸರ ಈ ಕಾರ್ಯದಿಂದ ಸಾರ್ವಜನಿಕರಲ್ಲಿ ಪೊಲೀಸರ ಬಗ್ಗೆ ಇರುವ ಭಯ ಕಡಿಮೆಯಾಗಿದ್ದು, ವಿಶ್ವಾಸ ಹೆಚ್ಚಾಗಿದೆ. ಸಾಮಾಜಿಕ ಜವಾಬ್ದಾರಿಯೊಂದಿಗೆ ಜನರ ಸಂಕಷ್ಟಗಳಿಗೆ ಸ್ಪಂದಿಸಿದ ವಿಜಯಪುರ ಪೊಲೀಸರ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ.
For More Updates Join our WhatsApp Group :




