26 ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಂಕಷ್ಟ ಸಾಧ್ಯತೆ.!
ಬೆಂಗಳೂರು: ಕರ್ನಾಟಕದಲ್ಲಿ ಈ ವರ್ಷ ಮುಂಗಾರು ಮಳೆ ಕ್ಷೀಣಿಸುವ ಮುನ್ಸೂಚನೆ ದೊರೆತಿದೆ. ಈ ಹಿನ್ನೆಲೆಯಲ್ಲಿ 26 ಜಿಲ್ಲೆಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಸೃಷ್ಟಿಯಾಗುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ. ಗುರುವಾರ ವಿಧಾನಸೌಧದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಮತ್ತು ಜಿಪಂ ಸಿಇಒಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಅವರು, ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಡಿಸಿಗಳೇ ಜವಾಬ್ದಾರರು: ಸಿಎಂ ಎಚ್ಚರಿಕೆ
ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾದರೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳನ್ನೇ ನೇರ ಹೊಣೆ ಮಾಡಲಾಗುವುದು ಎಂದು ಸಿಎಂ ಎಚ್ಚರಿಕೆ ನೀಡಿದ್ದಾರೆ. ಮಳೆ ಕೊರತೆಯಿಂದಾಗಿ ರಾಜ್ಯದ 213 ತಾಲ್ಲೂಕುಗಳು ಮತ್ತು 2,410 ಗ್ರಾಮ ಪಂಚಾಯತ್‌ಗಳಲ್ಲಿ ನೀರಿನ ಸಮಸ್ಯೆ ಉಂಟಾಗಬಹುದು ಎಂದು ಗುರುತಿಸಲಾಗಿದೆ. ಸದ್ಯ 114 ತಾಲ್ಲೂಕುಗಳಲ್ಲಿ ಈಗಾಗಲೇ ನೀರಿನ ಅತೀ ಹೆಚ್ಚಿನ ಸಮಸ್ಯೆ ಕಂಡುಬಂದಿದ್ದು, 137 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ.
ಹಣದ ಕೊರತೆಯಿಲ್ಲ, ಕುಡಿಯುವ ನೀರಿಗೆ ಆದ್ಯತೆ ನೀಡಿ: ಸಿಎಂ ಸೂಚನೆ
ಪ್ರಸ್ತುತ, ರಾಜ್ಯದ 14 ಪ್ರಮುಖ ಜಲಾಶಯಗಳಲ್ಲಿ 321.93 ಟಿಎಂಸಿ ಅಡಿ ನೀರು ಲಭ್ಯವಿದೆ. ಇದು ಒಟ್ಟು ಸಾಮರ್ಥ್ಯದ ಸುಮಾರು ಶೇ 36 ಆಗಿದೆ. ಸಾರ್ವಜನಿಕ ದೂರುಗಳಿಗೆ ತ್ವರಿತವಾಗಿ ಸ್ಪಂದಿಸುವುದು, ತಾಲ್ಲೂಕು ಮತ್ತು ವಾರ್ಡ್ ಮಟ್ಟದಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸುವುದು ಮತ್ತು 24X7 ವಿದ್ಯುತ್ ಪೂರೈಕೆಯೊಂದಿಗೆ ಆರ್‌ಒ ಘಟಕಗಳ ನಿರಂತರ ಕಾರ್ಯನಿರ್ವಹಣೆಯನ್ನು ಖಚಿತಪಡಿಸಿಕೊಳ್ಳುವುದು ಸೇರಿದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಿಎಂ ನಿರ್ದೇಶನ ನೀಡಿದ್ದಾರೆ.
For More Updates Join our WhatsApp Group :




